ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪ ಬೆಳಗಿಸಿ ಉದ್ಘಾಟಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು.

ನಾನು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತ್ಯಂತ ಖುಷಿಯಿಂದ ಪಾಲ್ಗೊಂಡಿದ್ದೇನೆ. ಮಂಡ್ಯ ಜಿಲ್ಲೆ ಸಾಹಿತ್ಯ ಕ್ಷೇತ್ರಕ್ಕೆ ಉತ್ಕೃಷ್ಟವಾದದ್ದು. ಕನ್ನಡಕ್ಕೆ ಮಂಡ್ಯ ಜಿಲ್ಲೆಯ ಕೊಡುಗೆ ಅಪಾರವಾದದ್ದು. ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ಕೊಡಲು ಸರ್ಕಾರ ಬದ್ಧವಾಗಿದೆ. ಸಮಗ್ರ ಕನ್ನಡ ಭಾಷಾ ಬಳಕೆಯನ್ನು ಜಾರಿಗೆ ತಂದಿದ್ದೇವೆ. ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿದುಕೊಳ್ಳಬೇಕಿದೆ. ಎಷ್ಟೇ ಭಾಷೆ ಕಲಿತರೂ ಹೃದಯದ ಭಾಷೆ ಮಾತೃ ಭಾಷೆಯೇ ಆಗಿರುತ್ತದೆ. ಯಾವ ಸಂಪ್ರದಾಯವೂ ಇಕ್ಕಟ್ಟಿಗೆ ಸಿಲುಕಬಾರದು ಎಂಬುದು ನಮ್ಮ ಆಶಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಉದ್ಘಾಟನಾ ಭಾಷಣದಲ್ಲಿ ಹೇಳಿದರು.

ಮಂಡ್ಯ ಹೊರವಲಯದ ಸಾಂಜ್ಯೋ ಆಸ್ಪತ್ರೆ ಹಿಂಭಾಗದ ಸುಮಾರು 100ಕ್ಕೂ ಅಧಿಕ ಎಕರೆ ಪ್ರದೇಶದಲ್ಲಿ ಕನ್ನಡ ನುಡಿ ಹಬ್ಬ ನಡೆಯುತ್ತಿದೆ. ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಕೆಆರ್‌ ಎಸ್‌ ಜಲಾಶಯದ ಮಾದರಿಯಲ್ಲಿ ಪ್ರವೇಶ ದ್ವಾರ ನಿರ್ಮಿಸಲಾಗಿದೆ. ಪ್ರಧಾನ ವೇದಿಕೆಗೆ ರಾಜಮಾತೆ ಕೆಂಪನಂಜಮ್ಮಣಿ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರು ಇಡಲಾಗಿದೆ. ಜತೆಗೆ ಸರ್‌ ಎಂ ವಿಶ್ವೇಶ್ವರಯ್ಯ ಮತ್ತು ಸರ್‌ ಮಿರ್ಜಾ ಇಸ್ಮಾಯಿಲ್‌ ಮಹಾ ಮಂಟಪ ಕೂಡಾ ಸಾಹಿತ್ಯಾಸಕ್ತರ ಗಮನ ಸೆಳೆಯುತ್ತಿದೆ. ಸಾಹಿತ್ಯಾಸಕ್ತರಿಗಾಗಿ 30 ಸಾವಿರ ಆಸನಗಳ ವ್ಯವಸ್ಥೆ, ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ.

ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಮೆರವಣಿಗೆ:

ಉದ್ಘಾಟನಾ ಕಾರ್ಯಕ್ರಮಕ್ಕೂ ಮೊದಲು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಅವರನ್ನು ವಿಶೇಷ ರಥದ ಮೂಲಕ ವೇದಿಕೆಗೆ ಕರೆತರಲಾಗಿತ್ತು.

ಈ ಸಂದರ್ಭದಲ್ಲಿ ಪುರುಷೋತ್ತಮಾನಂದನಾಥ ಸ್ವಾಮೀಜಿ, ಸಚಿವ ಚಲುರಾಯಸ್ವಾಮಿ, ಶಾಸಕರಾದ ರವಿಕುಮಾರ್‌, ಪಿಎಂ ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ಮೀರಾ ಶಿವಲಿಂಗಯ್ಯ, ದರ್ಶನ್‌ ಪುಟ್ಟಣಯ್ಯ, ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಮೈಸೂರು ಅರಮನೆಯ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಚಾಲನೆ ನೀಡಬೇಕಿತ್ತು. ಆದರೆ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರಿಂದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದ್ದರು.